ಕೋಲಾರ

ಕೋಲಾರದಲ್ಲಿ ಬಂದ್ ಗೆ ಉತ್ತಮ ಬೆಂಬಲ, ರೈತ ಸಂಘಟನೆಗಳಿಂದ ಪ್ರತಿಭಟನೆ..!

Published

on

ಕೋಲಾರ: ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ರೈತ ಸಂಘಟನೆಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಬೆಳಗ್ಗೆ 5 ಗಂಟೆಯಿಂದಲೇ ರಸ್ತೆಗೆ ಇಳಿದ ಪ್ರತಿಭಟನಾಕಾರರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಬಂದ್ ಗೆ ಸಹಕಾರ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಕೆಲವು ಕಡೆ ತೆರೆಯಲಾಗಿದ್ದ ಅಂಗಡಿಮುಂಗುಟ್ಟಗಳನ್ನು ಬಲವಂತವಾಗಿ ಪ್ರತಿಭಟನಾಕಾರರು ಬಾಗಿಲು ಮುಚ್ಚಿಸಿದ್ರು. ಇನ್ನೂ ಸಾರಿಗೆ ಸಂಚಾರ ವಿರಳವಾಗಿತ್ತು, ಆಟೋ ಮಾಲೀಕರ ಸಂಘ ಬಂದ್ ಗೆ ಬೆಂಬಲ ಸೂಚಿಸಿದ ಹಿನ್ನೆಲೆ ಆಟೋ ಗಳು ರಸ್ತೆಗೆ ಇಳಿಯಲಿಲ್ಲ. ಇನ್ನೂ ಬೆಳ್ಳಂಬೆಳಗ್ಗೆ ಟೈರ್ ಗೆ ಬೆಂಕಿ ಹಚ್ಚಲು ಯತ್ನಿಸುವಾಗ ಪೊಲೀಸರಿಂದ ತಡೆ ಮಾಡಿದ ಹಿನ್ನೆಲೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಟೈರ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವಾಗ ಪೊಲೀಸರು ಮಧ್ಯ ಪ್ರವೇಶಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಎಂದು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು. ರೈತ ವಿರೋಧಿ ಕಾಯ್ದೆಗಳನ್ನು ವಾಪಸು ಪಡೆಯುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕತ್ತೆಗಳೊಂದಿಗೆ ಮೆರವಣಿಗೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವರದಿ-ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ

Click to comment

Trending

Exit mobile version